ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ, ವಕೀಲರ ಸಂಘ (ರಿ.), ಬೆಳ್ತಂಗಡಿ ಹಾಗೂ ವಾಣಿ ಪದವಿ ಪೂರ್ವ ಕಾಲೇಜು, ಹಳೇಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 25ರಂದು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿಯ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ರಾಮಲಿಂಗಪ್ಪ ಅವರು, ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಮೂಲಭೂತ ಜ್ಞಾನ ಹೊಂದಿರುವುದು ಅತ್ಯಗತ್ಯ. ಕಾನೂನಿನ ಅರಿವು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯುತ ಜೀವನಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

Namana
Namana

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಷ್ಣು ಪ್ರಕಾಶ್ ಎಂ. ಅವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಶಿಕ್ಷಣದ ಜೊತೆಗೆ ಕಾನೂನು ಅರಿವು ಹಾಗೂ ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆಯೂ ಅಗತ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಅಲೋಶಿಯಸ್ ಎಸ್. ಲೋಬೋ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಶಾಂತ್ ಎಂ. ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಗಣೇಶ್ ಗೌಡ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ವಕೀಲ ಶ್ರೀ ಸಂದೇಶ್ ಕುಮಾರ್ ಅವರು ಮಕ್ಕಳ ಹಕ್ಕುಗಳು, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಇರುವ ಕಾನೂನುಗಳು ಹಾಗೂ ಮಾದಕ ದ್ರವ್ಯಗಳ ದುಷ್ಪರಿಣಾಮಗಳು ಮತ್ತು ಅವುಗಳ ವಿರುದ್ಧ ಇರುವ ಕಾನೂನು ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾನೂನಿನ ಅರಿವು ಹೊಂದುವ ಮೂಲಕ ಸಮಾಜದಲ್ಲಿ ನಡೆಯುವ ಅನ್ಯಾಯ ಮತ್ತು ದೌರ್ಜನ್ಯಗಳ ವಿರುದ್ಧ ಜಾಗೃತರಾಗುವಂತೆ ಕರೆ ನೀಡಿದರು. ಮಕ್ಕಳ ದಿನಾಚರಣೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗಾಗಿ ಆಚರಿಸಲಾಗುವ ಅಂತರಾಷ್ಟ್ರೀಯ ದಿನದ ಅಂಗವಾಗಿ ಆಯೋಜಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು. ಕಾರ್ಯಕ್ರಮವನ್ನು ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ಶ್ರೇಯ ನಿರೂಪಿಸಿದರು. ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ ಸ್ವಾಗತಿಸಿದರು. ಕಾನೂನು ಸಾಕ್ಷರತಾ ಸಂಘದ ವಿದ್ಯಾರ್ಥಿ ಪ್ರತಿನಿಧಿ ಸುಮಾಶ್ರೀ ವಂದಿಸಿದರು.

Namana
Namana