ಬೆಳ್ತಂಗಡಿ, ನ. 14: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ ನವೆಂಬರ್ 14ರಂದು ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಕ್ಕಳ ದಿನಾಚರಣೆಯ ಪ್ರಯುಕ್ತ ಪೂರ್ವ ಪ್ರಾಥಮಿಕ ತರಗತಿಯ ಪುಟಾಣಿ ಮಕ್ಕಳಿಗಾಗಿ ವಿಶೇಷ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿವಿಧ ವೇಷಭೂಷಣಗಳಲ್ಲಿ ಕಂಗೊಳಿಸಿದ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.

ನಂತರ ನಡೆದ ಸಭಾ ಕಾರ್ಯಕ್ರಮವನ್ನು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಅಧ್ಯಕ್ಷರಾದ ಶ್ರೀ ಸಂಪತ್ ಕುಮಾರ್ ಸುವರ್ಣ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಎಸ್‌.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಝಮೀರ್ ಸಹದಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಭಟ್ ಇಡ್ಯಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀ ಮೋಹನ್ ಕುಮಾರ್ ಸಿ.ಎನ್., ವಾರ್ಷಿಕೋತ್ಸವ ಸಮಿತಿಯ ಕಾರ್ಯದರ್ಶಿ ಶ್ರೀ ದಿನೇಶ್ ಮಾಳವ, ಕ್ರೀಡಾ ಕಾರ್ಯದರ್ಶಿಗಳಾದ ಶ್ರೀಮತಿ ಅಸ್ಮಾ ಹಾಗೂ ಶ್ರೀಮತಿ ವನಿತಾ, ಗೌರವ ಸಲಹೆಗಾರರಾದ ಶ್ರೀ ಗಣೇಶ್ ಪುಂಡಾಜೆ ಹಾಗೂ ಶ್ರೀಮತಿ ಅಕ್ಷತಾ, ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಕೃಷ್ಣಮೂರ್ತಿ ಆರ್. ಮತ್ತು ಶಾಲಾ ನಾಯಕಿ ಗಣ್ಯಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಯಿತು. ಬಳಿಕ ಪೂರ್ವ ಪ್ರಾಥಮಿಕ ತರಗತಿಯ ಪುಟಾಣಿ ಮಕ್ಕಳಿಂದ ಆಕರ್ಷಕ ನೃತ್ಯ ಕಾರ್ಯಕ್ರಮ ನಡೆಯಿತು. ಮಕ್ಕಳ ಮನಮೋಹಕ ನೃತ್ಯ ಪ್ರದರ್ಶನವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಪೋಷಕರಿಗಾಗಿ ವಿವಿಧ ಮನೋರಂಜನಾತ್ಮಕ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪೋಷಕರು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ಮಕ್ಕಳೊಂದಿಗೆ ಸಂಭ್ರಮ ಹಂಚಿಕೊಂಡರು. ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸುವ ಮೂಲಕ ಕಾರ್ಯಕ್ರಮವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸಲಾಯಿತು. ಮಕ್ಕಳ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದರ ಜೊತೆಗೆ ಪೋಷಕರು, ಶಿಕ್ಷಕರು ಹಾಗೂ ಶಾಲೆಯ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸಿದ ಈ ಮಕ್ಕಳ ದಿನಾಚರಣೆಯ ಕಾರ್ಯಕ್ರಮವು ಎಲ್ಲರ ಸಹಭಾಗಿತ್ವದಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.