ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಇದರ 2026-27ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ನವೆಂಬರ್ 28ರಂದು ಶಾಲಾ ಮೈದಾನದಲ್ಲಿ ಅತ್ಯಂತ ಸಂಭ್ರಮದಿಂದ ಜರುಗಿತು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಗಣ್ಯರನ್ನು ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಶಿಸ್ತಿನಿಂದ ಸಾಗಿದ ಪಥಸಂಚಲನವು ಕ್ರೀಡಾಕೂಟಕ್ಕೆ ವಿಶೇಷ ಮೆರುಗು ನೀಡಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆಯ ಮುಖ್ಯ ಗ್ರಂಥಪಾಲಕರು ಹಾಗೂ ಸಹ ಪ್ರಾಧ್ಯಾಪಕರಾದ ಡಾ. ರಜತಾ ಪಿ. ಶೆಟ್ಟಿ, ಎಸ್‌ಡಿಎಂ ಆಸ್ಪತ್ರೆ, ಉಜಿರೆಯ ಸಲಹಾ ವೈದ್ಯರು ಹಾಗೂ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಸಾತ್ವಿಕ್, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರು ಹಾಗೂ ಅರಣ್ಯಾಧಿಕಾರಿಗಳಾದ ರಾಘವೇಂದ್ರ ಕೆ. ಮತ್ತು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ರೀಡಾಕೂಟವನ್ನು ಉದ್ಘಾಟಿಸಿದ ಡಾ. ಸಾತ್ವಿಕ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ನಾಯಕತ್ವ ಗುಣ, ಆತ್ಮವಿಶ್ವಾಸ ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಯುತ್ತದೆ. ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.









